ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಮುಂದಾಗಿದೆ.
ಈ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಸಿಎಂ ಪುತ್ರ, ಅಳಿಯ, ಮೊಮ್ಮಕ್ಕಳು ಎಲ್ಲರೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ರಾಜ್ಯವನ್ನು ಆರ್ಥಿಕವಾಗಿ ದುಸ್ಥಿತಿಗೆ ತಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.
ಕೊರೊನಾ ಸಲಕರಣೆಗಳ ಖರೀದಿ, ಲಾಪ್ ಟಾಪ್ ಖರೀದಿ, ಟ್ರಾನ್ಸ್ ಫಾರ್ಮ್ ಸೇರಿದಂತೆ ಪ್ರತಿಯೊಂದು ಹಂತದಲ್ಲೂ ಹಗರಣಗಳು ನಡೆಯುತ್ತಿವೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಆರ್ಥಿಕ ದುಸ್ಥಿತಿ ಹೆಚ್ಚಿದೆ. ಸರ್ಕಾರ ಸಾವಿರಾರು ಕೋಟಿ ರೂ ಸಾಲ ಮಾಡುತ್ತಿದೆ. ಸರ್ಕಾರದ ಶಾಸಕರು ಹಾಗೂ ಸಚಿವರ ನಡುವೆಯೇ ಸಹಮತವಿಲ್ಲ, ಆಡಳಿತದಲ್ಲಿ ಸಿಎಂ ಪುತ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ನಾವು ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ತಿಳಿಸಿದರು.