ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಡಿಕೆಶಿ ಬೆಂಬಲಿಗರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐ ಆರ್ಕೂಡ ದಾಖಲಾಗಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.
ಸಿಬಿಐ ದಾಳಿ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವ ನಗರ ನಿವಾಸ ಬಳಿ ಸಾಗರೋಪಾದಿಯಲ್ಲಿ ಆಗಮಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ. ಶಿವಕುಮಾರ್ ಬೆಂಬಲಿಗರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.