ಬೆಂಗಳೂರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾನಿರತ ರೈತರೊಬ್ಬರು ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆಗಳನ್ನು ವಿರೋಧಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜಧಾನಿಯಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ರೈತರು ರ್ಯಾಲಿ ನಡೆಸಿದ್ದಾರೆ.
ಪ್ರತಿಭಟನೆ ನಡೆಸುತ್ತಿದ್ದ ರೈತರೊಬ್ಬರು ಫ್ರೀಡಂ ಪಾರ್ಕ್ ಬಳಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಪ್ರತಿಭಟನೆಯ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿರುವ ರೈತರು, ಭೂ ಸುಧಾರಣಾ ಕಾಯ್ದೆ ರೈತರ ಮರಣ ಶಾಸನವಾಗಿದೆ. ಅಧಿವೇಶನದಲ್ಲಿ ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.