ಬೆಂಗಳೂರು: ಮಕ್ಕಳಿಗೆ ಶಿಕ್ಷಣ ಕೊಡುವ ಸೋಗಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣ ಕೊಡುವ ನೆಪದಲ್ಲಿ ಶಿಕ್ಷಣ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ನೀಡುತ್ತಾ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತರುತ್ತಿರುವುದು ಖಂಡನೀಯ. ಈ ವರ್ಷ ಶಾಲೆ ಆರಂಬಿಸದಿದ್ದರೆ ದೇಶ ಮುಳುಗಿ ಹೋಗುತ್ತಾ? ಇಂತಹದೊಂದು ಹುಚ್ಚಾಟ ಸರ್ಕಾರಕ್ಕೆ ಬೇಕಾ? ಇದು ನಾಗರಿಕ ಸರ್ಕಾರದ ನಡೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ, ಕನಿಷ್ಠ ಆಕ್ಸಿಜನ್ ಒದಗಿಸಲು ಪರದಾಡುತ್ತಿದೆ. ಜೀವ ರಕ್ಷಣೆ ಮಾಡಬೇಕಾಗಿದ್ದು ಸರ್ಕಾರದ ಕರ್ತವ್ಯ. ಅದನ್ನು ಬಿಟ್ಟು ಶಾಲೆಗಳನ್ನು ತೆರೆಯುವ ಬಗ್ಗೆ ಯೋಚಿಸುತ್ತಿರುವುದು ಮಾನವೀಯತೆಯ ಲಕ್ಷಣವೇ ಎಂದಿ ಕಿಡಿಕಾರಿದ್ದಾರೆ.
ಶಿಕ್ಷಕರಿಗೆ ವೇತನ ಹಾಗೂ ಸೌಲಭ್ಯಗಳ ಕಡಿತದ ಬೆದರಿಕೆ ಒಡ್ಡಿ ಸಾವಿನ ದವಡೆಗೆ ನೂಕಿದ ಶಿಕ್ಷಕರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಬೇಕು. ಆ ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಸೋಮವಾರದೊಳಗೆ ವಿದ್ಯಾಗಮ ಶಿಕ್ಷಣದ ಯಡವಟ್ಟು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.