ಬೆಂಗಳೂರು: ರೈತರ ಪ್ರತಿಭಟನೆ ನಡುವೆಯೂ ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮಸೂದೆ ವಿರೋಧಿಸಿ ಕಳೆದ ಮೂರು ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಸದನದಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆಯೇ ರಸ್ತೆಗಿಳಿದು ಆಕ್ರೋಶ ಹೊರ ಹಾಕಿದ್ದಾರೆ. ಫ್ರೀಡಂ ಪಾರ್ಕ್ ಬಳಿ ರಸ್ತೆ ತಡೆ ನಡೆಸಿರುವ ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ರಸ್ತೆ ಮಧ್ಯೆಯೇ ಕುಳಿತು ಧರಣಿ ಆರಂಭಿಸಿದ್ದಾರೆ.
ಒಂದೆಡೆ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾನಿರತ ರೈತರನ್ನು ತಡೆಯಲು ಪೊಲೀಸರು ಮುಂದಾಗಿದ್ದಾರೆ. ಆದರೆ ಬ್ಯಾರಿಕೇಡ್ ಗಳನ್ನು ತಳ್ಳಿ ರೈತರು ಪೊಲೀಸರ ಮೇಲೆಯೇ ಮುಗಿಬಿದ್ದು, ವಾಗ್ವಾದ ನಡೆಸಿದ್ದಾರೆ. ರೈತರ ಪ್ರತಿಭಟನೆ ಬೆನ್ನಲ್ಲೇ ಫ್ರೀಡಂ ಪಾರ್ಕ್ ಸುತ್ತ ಮುತ್ತ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.