ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿರುವ ಕಾರಣ ಆರ್ಥಿಕ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ಮಿತವ್ಯಯ ಸಾಧಿಸುವ ಉದ್ದೇಶದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಿನ ಆದೇಶದವರೆಗೆ ತಡೆ ನೀಡಿತ್ತು.
ಇದರಿಂದಾಗಿ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಇದೀಗ ಕೊರೊನಾ ಸಂದರ್ಭದಲ್ಲಿ ತುರ್ತು ಸೇವೆಗಳಿಗೆ ಅಗತ್ಯವಾದ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ.
ಮುಂದಿನ ದಿನಗಳಲ್ಲಿ ಕೊರೊನಾ ಮತ್ತಷ್ಟು ವ್ಯಾಪಕವಾಗುವ ಸಾಧ್ಯತೆ ಇರುವುದರಿಂದ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಯ ಸೇವೆ ಅತ್ಯಗತ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಎರಡೂ ಇಲಾಖೆಗಳಿಗೆ ನೇಮಕಾತಿ ಮಾಡಿಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿರುವ ಕಾರಣ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.