ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಹಾಗೂ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅನರ್ಹರು ಪಡೆದುಕೊಂಡಿರುವ ಪಡಿತರ ಚೀಟಿ ಮತ್ತು ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದಾರೆ. ಕೆಲವು ಸರ್ಕಾರಿ ನೌಕರರು, ಶ್ರೀಮಂತರು, ಟ್ರ್ಯಾಕ್ಟರ್ ಸೇರಿ ಇತರೆ ವಾಹನ ಹೊಂದಿದವರು ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿ ಕೂಡಲೇ ಹಿಂತಿರುಗಿಸಬೇಕು. ಅಧಿಕಾರಿಗಳು ಪರಿಶೀಲನೆ ನಡೆಸಿ ಅಂತಹ ಕಾರ್ಡ್ಗಳನ್ನು ರದ್ದುಪಡಿಸಬೇಕು. ಇಲ್ಲವಾದರೆ ಕಾನೂನು ಅನ್ವಯ ಕಠಿಣ ಕ್ರಮಕೈಗೊಳ್ಳಬೇಕೆಂದು ಹೇಳಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಪಡಿತರ ಪೂರೈಸುವ ನಿಟ್ಟಿನಲ್ಲಿ ಹಾಗೂ ಅನರ್ಹರು ಸೌಲಭ್ಯವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಕೊರೊನಾ ಸೋಂಕು ಹರಡುವುದು ಆರಂಭವಾಗುವ ಮೊದಲು ಸುಮಾರು 63 ಸಾವಿರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ಕಾರ್ಯಾಚರಣೆ ಮುಂದುವರೆಸಿ ನಕಲಿ ಮತ್ತು ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಆಹಾರ ಇಲಾಖೆಯಿಂದ ಅಭಿಯಾನ ಕೈಗೊಳ್ಳುವಂತೆ ಸೂಚಿಸಿದ್ದು, ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ಆರ್ಥಿಕ ಹೊರೆ ಕಡಿಮೆ ಮಾಡಬೇಕು ಎಂದು ಹೇಳಿದ್ದಾರೆ.