ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದು, ಈಗ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದೆ. ಜೂನ್ 30 ರವರೆಗೆ ಇದು ಮುಂದುವರೆಯಲಿದ್ದು, ಇದರ ಮಧ್ಯೆ ಹಲವು ಸಡಿಲಿಕೆಗಳನ್ನು ನೀಡಲಾಗಿದೆ.
ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಜೂನ್ 8ರಿಂದ ಧಾರ್ಮಿಕ ಮಂದಿರಗಳನ್ನು ತೆರೆಯಬಹುದೆಂದು ಕೇಂದ್ರ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ 75 ದಿನಗಳ ಬಳಿಕ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ.
ಆದರೆ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನ ಸದ್ಯಕ್ಕೆ ಭಕ್ತಾದಿಗಳಿಗೆ ತೆರೆಯುವುದಿಲ್ಲ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕೊರೊನಾ ತಡೆಗಟ್ಟಲು ಅಗತ್ಯ ವ್ಯವಸ್ಥೆ ಮಾಡುವ ಸಲುವಾಗಿ ಸಮಯಾವಕಾಶ ಬೇಕಾಗಿರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.