ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಸೂಚನೆ ಮೇರೆಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಅದನ್ನು ಪಡೆದುಕೊಳ್ಳಲಾಗಿದೆ.
ಮಂಗಳವಾರದಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಮೇಶ್ ಜಾರಕಿಹೊಳಿ ಹಾಗೂ ಯುವತಿಯೊಂದಿಗಿದ್ದ ವಿಡಿಯೋ ಹಾಗೂ ಅವರುಗಳು ಮಾತನಾಡಿರುವ ಆಡಿಯೋದೊಂದಿಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಲ್ಲದೆ ಈ ವಿಚಾರ ರಾಷ್ಟ್ರ ಹಾಗೂ ರಾಜ್ಯದ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ಪ್ರಕರಣ ಬಹಿರಂಗವಾಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಕೂಡ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಲ್ಕು ವಿಧಾನಸಭೆ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ವಿಧಾನಸಭಾ ಚುನಾವಣೆ ನಡೆಯುತ್ತಿರುವುದರಿಂದ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿತ್ತು. ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚನೆ ರವಾನೆಯಾದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಲಾಗಿದೆ.