ಪುತ್ತೂರು: ಕೃಷಿಕರ ಅಭ್ಯುದಯಕ್ಕೆ ಪೂರಕವಾದ ಯೋಜನೆಗಳನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಎಪಿಎಂಸಿಯನ್ನು ಇನ್ನಷ್ಟು ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದು ಮೂಲಸೌಕರ್ಯ ಜೊತೆಗೆ ಕೃಷಿಕರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಭರವಸೆ ನೀಡಿತ್ತು. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅನುಷ್ಠಾನ ಸಾಧ್ಯವಾಗಿರಲಿಲ್ಲ. ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಆಗ ಪ್ರಣಾಳಿಕೆಯಲ್ಲಿ ತಿದ್ದುಪಡಿ ತರುವ ಭರವಸೆ ನೀಡಿದ್ದ ಕಾಂಗ್ರೆಸ್ ಈಗ ಪ್ರತಿಭಟನೆ ನಡೆಸುತ್ತಿರುವುದು ವಿಪರ್ಯಾಸವಾಗಿದೆ ಎಂದು ಸೋಮಶೇಖರ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್. ಅಂಗಾರ, ಸಂಜೀವ ಮಠಂದೂರು ಮೊದಲಾದವರಿದ್ದರು.