ಬೆಂಗಳೂರು: ಶಾಲಾ, ಕಾಲೇಜುಗಳನ್ನು ಅಕ್ಟೋಬರ್ 15 ರಿಂದ ಆರಂಭಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿಯೂ ಶಾಲಾ, ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಇವತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಹಂತಹಂತವಾಗಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆದಿದೆ. ಆದರೆ, ಸದ್ಯಕ್ಕೆ ಶಾಲಾ-ಕಾಲೇಜುಗಳನ್ನು ಆರಂಭಿಸಬಾರದೆಂಬ ಒತ್ತಾಯ ಪೋಷಕರಿಂದ ಕೇಳಿ ಬಂದಿದೆ ಎನ್ನಲಾಗಿದೆ.
ಸಭೆ ಬಳಿಕ ಮಾತನಾಡಿದ ಸಚಿವ ಶ್ರೀರಾಮುಲು, ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ತಜ್ಞರ ಸಲಹೆಯನ್ನು ಪಡೆದು ಶಿಕ್ಷಣ ಇಲಾಖೆಗೆ ವರದಿ ನೀಡಲಾಗುವುದು. ಶಾಲೆಗಳು ಆರಂಭವಾದರೆ ಮಕ್ಕಳಿಗೆ ತೊಂದರೆಯಾಗಬಾರದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಶಾಲೆಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. ಈ ಬಗ್ಗೆ ತಜ್ಞರ ಅಭಿಪ್ರಾಯವನ್ನು ಪಡೆಯಲಾಗುವುದು. ಪೋಷಕರು ಮತ್ತು ಮಕ್ಕಳ ಅಭಿಪ್ರಾಯ ಕೂಡ ಪಡೆದು ಎಲ್ಲ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಹೇಳಿದ್ದಾರೆ.