ಬೆಂಗಳೂರು: ಕೆಪಿಸಿಸಿ ವಕ್ತಾರ ಲಕ್ಷ್ಮಣ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದು ಬಿಜೆಪಿ ಶಾಸಕರ ನಕಲಿ ಸಹಿಯನ್ನು ಬಳಸಿ ಸುಳ್ಳು ದಾಖಲೆ ಬಿಡುಗಡೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಜಿ. ದೇವೇಗೌಡ ಅವರು ಈ ಕುರಿತು ದೂರು ನೀಡಿದ್ದು, ಕೆಪಿಸಿಸಿ ವಕ್ತಾರ ಲಕ್ಷ್ಮಣ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಆಗಸ್ಟ್ 26 ರಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಲಕ್ಷ್ಮಣ ಅವರು, ‘ಸೂಪರ್ ಸಿಎಂ ಬಿ.ವೈ. ವಿಜಯೇಂದ್ರ ದರ್ಬಾರ್’ ನಕಲಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಶಾಸಕರು ಸಹಿ ಮಾಡಿ ಪಕ್ಷದ ವರಿಷ್ಠರಿಗೆ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವೈಯಕ್ತಿಕವಾಗಿ ವಿಜಯೇಂದ್ರ ಅವರನ್ನು ನಿಂದಿಸಿದ ಲಕ್ಷ್ಮಣ ವಿರುದ್ಧ ಕ್ರಮಕೈಗೊಳ್ಳಬೇಕೆಂದು ದೂರು ನೀಡಲಾಗಿದೆ ಎಂದು ಹೇಳಲಾಗಿದೆ.