
ಬೆಂಗಳೂರು: ಕರ್ನಾಟಕ ಭೂ ಮಂಜೂರಾತಿ(ಎರಡನೇ ತಿದ್ದುಪಡಿ) ನಿಯಮಗಳು -2020 ಕ್ಕೆ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬಗರ್ ಹುಕುಂ ಸಾಗುವಳಿದಾರರು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಎರಡು ವರ್ಷ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ನಮೂನೆ 50 ರಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಲು ಒಂದು ವರ್ಷ ಅವಕಾಶ ನೀಡಲಾಗಿತ್ತು.
ಇದಾದ ನಂತರದಲ್ಲಿ ಸರ್ಕಾರ ಬದಲಾಗಿದ್ದರಿಂದ ನಮೂನೆ 50 ರ ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿಲ್ಲ. ಇದಕ್ಕೆ ಇನ್ನಷ್ಟು ಸಮಯ ಬೇಕಿದೆ ಎನ್ನುವ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಎರಡು ವರ್ಷ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.