ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ಮೃತಪಟ್ಟಿದ್ದು ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ.
ಅಥಣಿಯಿಂದ ಸೋಂಕಿತನನ್ನು ಕರೆತರಲಾಗಿದ್ದು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೊದಲಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಗಲಾಟೆ ಮಾಡಿದ್ದ ಸಂಬಂಧಿಕರು ಸೋಂಕಿತ ವ್ಯಕ್ತಿ ಮೃತಪಟ್ಟ ಸುದ್ದಿ ತಿಳಿದು ಆಕ್ರೋಶಗೊಂಡಿದ್ದಾರೆ.
ಆಸ್ಪತ್ರೆ ಎದುರು ಗುಂಪುಗೂಡಿದ ಸಂಬಂಧಿಕರು ಗಲಾಟೆ ನಡೆಸಿದ್ದಾರೆ. ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ, ಆಸ್ಪತ್ರೆ ಆವರಣದಲ್ಲಿದ್ದ ವಾಹನಗಳನ್ನು ಹಾನಿಗೊಳಿಸಿದ್ದಾರೆ. ಅಲ್ಲದೆ ಆಸ್ಪತ್ರೆಯೊಳಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.