ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಹೀಗಿದ್ದರೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಹಾಕುವ ಮೂಲಕ ವಿಷ ಬೀಜ ಬಿತ್ತುವ ಪ್ರಯತ್ನ ನಡೆಸಿದ್ದು ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಛತ್ರಪತಿ ಶಿವಾಜಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಬೆಳಗಾವಿ ಸೈಬರ್ ಕ್ರೈಮ್ ಪೋಲಿಸ್ ಠಾಣೆ ಎದುರು ಮರಾಠಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಗೆ ಮುಂದಾದವರೊಂದಿಗೆ ಎಸಿಪಿ ನಾರಾಯಣ ಅವರು ಮಾತುಕತೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದು, ಯಾರೂ ಪ್ರತಿಭಟನೆ ಮಾಡದಂತೆ ಮನವಿ ಮಾಡಿದ್ದಾರೆ.
ಪೊಲೀಸರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದ್ದಾರೆ. ಬೆಳಗಾವಿ ಖಡೇಬಜಾರ್, ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.