ಬೆಂಗಳೂರು: ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ರಾಜ್ಯದಲ್ಲಿಯೂ ಪ್ರತಿಭಟನೆ ಹೆಚ್ಚುತ್ತಿದ್ದು, ಹಲವೆಡೆ ಕಲ್ಲುತೂರಾಟ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ರೈಲು ನಿಲ್ದಾಣಗಳಲ್ಲಿ ಪೊಲೀಸ್ ಇಲಾಖೆಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಪ್ರಮುಖ ರೈಲು ನಿಲ್ದಾಣಗಳಲ್ಲಿ ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ. ರೈಲ್ವೆ ಹಳಿಗಳ ಮೇಲೆ ಗಸ್ತು ಹೆಚ್ಚಿಸಲು ಸೂಚಿಸಲಾಗಿದೆ. ಬೆಂಗಳೂರು ಕೆ ಎಸ್ ಆರ್ ರೈಲು ನಿಲ್ದಾಣ, ಯಶವಂತಪುರ, ಹುಬ್ಬಳ್ಳಿ, ಕಲಬುರ್ಗಿ, ಬಳ್ಳಾರಿ, ಬೆಳಗಾವಿ, ರಾಯಚೂರು, ಶಿವಮೊಗ್ಗ, ಮಂಗಳೂರು, ಮೈಸೂರು ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ.
ಪ್ರಯಾಣಿಕರ ಸೋಗಿನಲ್ಲಿ ಪ್ರತಿಭಟನಾಕಾರರು ರೈಲ್ವೆ ನಿಲ್ದಾಣಗಳಿಗೆ ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣ ವಶಕ್ಕೆ ಪಡೆಯುವಂತೆ ರೈಲ್ವೆ ಎಸ್ ಪಿ ಸಿರಿಗೌರಿ ತಿಳಿಸಿದ್ದಾರೆ.