ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಕೇಳಿ ಬಂದಿದೆ. ಯುವತಿಯ ಪೋಷಕರೇ ಡಿಕೆಶಿ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಸಿಎಂ ಬಿ.ಎಸ್.ಯಡಿಯೂರಪ್ಪ ಮೃದುಧೋರಣೆ ತಳೆದಿದ್ದಾರೆ ಎಂದು ಗುಡುಗಿದರು.
ಸಿಡಿ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಒಳ ಒಪ್ಪಂದವಾಗಿದೆ. ಅದಕ್ಕಾಗಿಯೇ ಸಿಎಂ, ಡಿಕೆಶಿ ಬಗ್ಗೆ ಸಾಫ್ಟ್ಆಗಿದ್ದಾರೆ. ಅವರ ಸಿಡಿ ಇವರ ಬಳಿ, ಇವರ ಸಿಡಿ ಅವರ ಬಳಿ ಇದೆ. ಹಾಗಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.