ಬೆಂಗಳೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಗೆ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ ಎಂದು ಕಿಡಿಕಾರಿದ್ದಾರೆ.
ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ.
ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಬೆಳಗಾವಿ ನಮ್ಮದು ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಯಡಿಯೂರಪ್ಪ ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.