ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಸೋಂಕಿನ ಬಳಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳಾಗಿದ್ದು, ಆರೋಗ್ಯ ಮೂಲಸೌಕರ್ಯದಲ್ಲಿ ಪ್ರಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಸುಧಾರಣೆಯಾಗಿದೆ. ಕೋವಿಡ್ ಸಂಕಷ್ಟದ ಬೆನ್ನಲ್ಲೇ ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆಗೆ ಆದ್ಯತೆ ನೀಡಲಾಗಿದೆ. ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಸುಧಾರಿಸಿದೆ. ಕೋವಿಡ್ ಸಾಂಕ್ರಾಮಿಕ ರೋಗದ ನಿರ್ವಹಣೆಗೆ ಸರ್ಕಾರದಿಂದ ಸಮರ್ಪಕ ಔಷಧಗಳನ್ನು ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಪ್ರತಿನಿತ್ಯ 2 ಲಕ್ಷ ಜನರಲ್ಲಿ ಟೆಸ್ಟ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ 70:30 ಅನುಪಾತದಲ್ಲಿ ಆರ್ ಟಿ ಪಿ ಸಿ ಆರ್, ರ್ಯಾಪಿಡ್ ಟೆಸ್ಟ್ ಮಾಡಲು ಸೂಚಿಸಿತ್ತು. ರಾಜ್ಯದಲ್ಲಿ ಶೇ.80ಕ್ಕಿಂತ ಹೆಚ್ಚು ಆರ್ ಟಿ ಪಿ ಸಿ ಆರ್ ಟೆಸ್ಟ್ ಮಾಡಲಾಗಿದೆ. ಮೇ 22ರ ವರೆಗೆ 2.85 ಕೋಟಿ ಕೋವಿಡ್ ಟೆಸ್ಟ್ ಮಾಡಲಾಗಿದೆ. 2020ರ ಫೆಬ್ರವರಿಯಲ್ಲಿ ಕೇವಲ 2 ಲ್ಯಾಬ್ ಗಳಿದ್ದವು. ಆದರೆ ಈಗ ರಾಜ್ಯದಲ್ಲಿ 241 ಲ್ಯಾಬ್ ಗಳನ್ನು ತೆರೆಯಲಾಗಿದೆ. ಆಸ್ಪತ್ರೆಗಳಲ್ಲೂ ಬೆಡ್ ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಒಟ್ಟಾರೆ ಸರ್ಕಾರದಿಂದ ಆರೋಗ್ಯ ಮೂಲಸೌಕರ್ಯದಲ್ಲಿ ಪ್ರಗತಿಯಾಗಿದೆ ಎಂದು ವಿವರಿಸಿದ್ದಾರೆ.