ಬೆಂಗಳೂರು: ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಆಸ್ಪತ್ರೆ ವೈದ್ಯರು ನೀಡಿದ ಮಾಹಿತಿ ಪ್ರಕಾರ ಮೃತರೆಲ್ಲರೂ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ 24 ಗಂಟೆಯಲ್ಲಿ ಒಟ್ಟು 24 ರೋಗಿಗಳು ಸಾವನ್ನಪ್ಪಿದ್ದು, 23 ರೋಗಿಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 123 ಕೊರೊನಾ ಸೋಂಕಿತರು ದಾಖಲಾಗಿದ್ದು, ಅವರಲ್ಲಿ 14 ಜನರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ 14 ಸೋಂಕಿತರು ಸಾವನ್ನಪ್ಪಿದ್ದಾರೆ. ಇವರು ಕೋವಿಡ್ ಸಹಜಕಾಯಿಲೆ ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3 ಗಂಟೆ ಅವಧಿಯಲ್ಲಿ 3 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂವರು ಮಾತ್ರ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾಗಿ ತಿಳಿಸಿದರು.
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇರಳ ಮುಖ್ಯಮಂತ್ರಿ
ಹಾಗಾಗಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ 23 ರೋಗಿಗಳು ಆಕ್ಸಿಜನ್ ಕೊರತೆ ಮಾತ್ರದಿಂದಲೇ ಸಾವನ್ನಪ್ಪಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ. ಈ ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಬೇಕಿದೆ. ಸಿಎಂ ಯಡಿಯೂರಪ್ಪ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.