ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಜುಲೈ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದು ದೈನಂದಿನ ಸ್ವಚ್ಛತಾ ಕಾರ್ಯದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ.
ಪ್ರಸ್ತುತ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಇಂತಹ ಸಂದರ್ಭದಲ್ಲಿ ಪೌರ ಕಾರ್ಮಿಕರು ಮುಷ್ಕರ ಕೈಗೊಂಡರೆ ಅದು ಸಾರ್ವಜನಿಕ ಜೀವನದ ಮೇಲೆ ಪರಿಣಾಮ ಬೀರಲಿದೆ.
ಈ ಹಿಂದೆ ಪೌರಕಾರ್ಮಿಕರು ಮುಷ್ಕರ ಕೈಗೊಂಡ ವೇಳೆ ಅದು ಸಾರ್ವಜನಿಕ ಜನಜೀವನದ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ ಸರ್ಕಾರ ಕೂಡಲೇ ಪೌರಕಾರ್ಮಿಕ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಅವರುಗಳ ಬೇಡಿಕೆಗೆ ಸ್ಪಂದಿಸಬೇಕಿದೆ ಎಂಬುದು ಎಲ್ಲರ ಅಭಿಪ್ರಾಯವಾಗಿದೆ.