ನವದೆಹಲಿ: ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ.
ರಾಜ್ಯದಲ್ಲಿ ಆಕ್ಸಿಜನ್ ಕೊರತೆಯುಂಟಾಗುತ್ತಿದ್ದು, ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರತಿದಿನ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಈ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿತ್ತು. ಅಲ್ಲದೇ 965 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಬಹುದು ಎಂದು ಹೇಳಿತ್ತು.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಮತ್ತೆ ಬದಲಾವಣೆ ಮಾಡಿದ ಸಿಎಂ
ಇದೀಗ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿರುವ ಸುಪ್ರೀಂ ಕೋರ್ಟ್, ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕರ್ನಾಟಕದ ಜನರನ್ನು ಸಂಕಷ್ಟಕ್ಕೆ ತಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ಬೇಡ. ಕರ್ನಾಟಕ ಹೈಕೋರ್ಟ್ ಪರಿಶೀಲನೆ ನಡೆಸಿಯೇ ಆದೇಶ ಹೊರಡಿಸಿರುವುದರಿಂದ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಹೈಕೋರ್ಟ್ ಆದೇಶದಂತೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಬೇಕು ಎಂದು ತಾಕೀತು ಮಾಡಿದೆ. ಈ ಮೂಲಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.