ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಕಳೆದ 8 ತಿಂಗಳಿಂದ ಬಾಗಿಲು ಮುಚ್ಚಿದ್ದ ಕಾಲೇಜುಗಳು ನಾಳೆಯಿಂದ ತೆರೆಯಲಿದ್ದು, ಶೈಕ್ಷಣಿಕ ಚಟುವಟಿಗಳನ್ನು ಆರಂಭಿಸಲಾಗುತ್ತಿದೆ. ಕೋವಿಡ್ ಮಾರ್ಗ ಸೂಚಿಗಳ ಅನ್ವಯ ಕಾಲೇಜುಗಳು ಆರಂಭವಾಗಲಿದ್ದು, ಸಿದ್ಧತೆ ಭರದಿಂದ ಸಾಗಿದೆ.
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕಾಲೇಜುಗಳು ನಾಳೆಯಿಂದ ಆರಂಭವಾಗುತ್ತಿದ್ದು, ಮೊದಲ ಹಂತದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳು ನಡೆಯಲಿದೆ. ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ಪ್ರಮಾಣ ಪತ್ರವನ್ನು ತೆಗೆದುಕೊಂಡು ಬರುವಂತೆ ಸೂಚಿಸಲಾಗಿದೆ.
ಅಲ್ಲದೇ ತರಗತಿಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿದ್ದು, ದೊಡ್ಡ ಕ್ಲಾಸ್ ಗಳಲ್ಲಿ ಒಂದು ಬೆಂಚ್ ಮೇಲೆ ಇಬ್ಬರು ವಿದ್ಯಾರ್ಥಿಗಳು ಹಾಗೂ ಚಿಕ್ಕ ಕ್ಲಾಸ್ ಗಳಲ್ಲಿ ಓರ್ವ ವಿದ್ಯಾರ್ಥಿಗೆ ಮಾತ್ರ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ನೀರು, ಊಟವನ್ನು ಮನೆಯಿಂದಲೇ ತರುವಂತೆ ಹೇಳಲಾಗಿದೆ.