ಬೆಂಗಳೂರು: ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಶಿಫಾರಸು ಮಾಡುವ ನಿರ್ಧಾರದಿಂದ ರಾಜ್ಯ ಸರ್ಕಾರ ಏಕಾಏಕಿ ಹಿಂದೆ ಸರಿದಿದೆ. ಮೀಸಲಾತಿ ವಿಚಾರವಾಗಿ ಸಧ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಇಂದಿನ ಸಂಪುಟ ಸಭೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತೆ ಎಂಬ ಹಲವು ನಿರೀಕ್ಷೆಗಳಿದ್ದವು. ಆದರೆ ಸಂಪುಟ ಸಭೆಗೂ ಮುನ್ನ ಸ್ಪಷ್ಟಪಡಿಸಿರುವ ಸಿಎಂ ಯಡಿಯೂರಪ್ಪ, ವೀರಶೈವ-ಲಿಂಗಾಯತ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ನಡೆಸುತ್ತೇವೆ. ಆದರೆ ಈ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲ್ಲ. ಇನ್ನೊಮ್ಮೆ ದೆಹಲಿಗೆ ಹೋಗಿ ಈ ಬಗ್ಗೆ ಸಮಾಲೋಚನೆ ನಡೆಸಿ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಸಿಎಂ ಹೇಳಿಕೆ ಬೆನ್ನಲ್ಲೇ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಮುದಾಯ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಿ ಮೀಸಲಾತಿ ನೀಡುವಂತೆ ಧರಣಿ ನಡೆಸಿ ಆಗ್ರಹಿಸಿದ್ದೆವು. ಆದರೆ ಇದೀಗ ಒಬಿಸಿ ಪಟ್ಟಿ ಶಿಫಾರಸು ವಿಚಾರವನ್ನು ಏಕಾಏಕಿ ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಾದರೂ ಸರ್ಕಾರ ಸೂಕ್ತ ನಿರ್ಧಾರ ಮಾಡಲಿದೆಯಾ ಎಂಬುದನ್ನು ಕಾದುನೋಡಬೇಕು ಎಂದಿದ್ದಾರೆ.