ಬೆಂಗಳೂರು: ವಿಧಾನಸಭೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಸದಸ್ಯರು ಸದನದಲ್ಲಿ ಸಿಡಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ಸಿಡಿಗಳನ್ನು ಪ್ರದರ್ಶಿಸಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಪ್ರಕರಣದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಬಿಜೆಪಿಯಿಂದ ಯತ್ನಾಳ್ ಉಚ್ಛಾಟಿಸಲು ಆಗ್ರಹಿಸಿ ಪಕ್ಷದ ಶಾಸಕರಿಂದ ದೂರು
ಈ ನಡುವೆ ವಿಪಕ್ಷ ಸದಸ್ಯರು ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಬೇಕು. ಈ ರೀತಿ ಸಿಡಿ ಹಿಡಿದು ಪ್ರತಿಭಟಿಸುವುದು ಸತ್ ಸಂಪ್ರದಾಯವಲ್ಲ. ಪ್ರಶ್ನೋತ್ತರ ಕಲಾಪದ ಬಳಿಕ ಚರ್ಚೆಗೆ ಅವಕಾಶ ನಿಡುವುದಾಗಿ ಸ್ಪೀಕರ್ ಕಾಗೇರಿ ಹೇಳಿದರು. ಸ್ಪೀಕರ್ ಮನವಿಗೂ ಬಗ್ಗದ ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರೆಸಿ, ಸಿಡಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸದನದಲ್ಲಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಪೀಕರ್ ಕಾಗೇರಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.