ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 27 ರ ಬದಲು ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಕೂಡ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ದಿನಾಂಕ ಹೊಂದಾಣಿಕೆ ಆಗುತ್ತಿರಲಿಲ್ಲ. ಹೀಗಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ನಿರ್ಧರಿಸಲಾಗಿತ್ತು. ಸ್ಥಳ ಕೂಡ ನೋಡಲಾಗಿತ್ತು. ಆದರೆ ಆಗಸ್ಟ್ 30 ರಂದು ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಅಂದು ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಯೋಜನೆಗೆ ಚಾಲನೆ ನೀಡಲಾಗುವುದು. ರಾಹುಲ್ ಗಾಂಧಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.