ಬೆಂಗಳೂರು: ತಮಿಳುನಾಡಿಗೆ ಅಪ್ಪಳಿಸಿರುವ ನಿವಾರ್ ಚಂಡಮಾರುತ ಕರ್ನಾಟಕದಲ್ಲೂ ಸಂಕಷ್ಟವನ್ನು ತಂದೊಡ್ದುತ್ತಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು-ಸಿಡಿಲು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚಂಡಮಾರುತದ ಪರಿಣಾಮ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಈಗಾಗಲೇ ಮುಂಜಾನೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಮಳೆ ಹೆಚ್ಚಾದಲ್ಲಿ ನಗರದ ರಸ್ತೆಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ನಿವಾರ್ ಚಂಡಮಾರುತ ವಾಯವ್ಯ ಭಾಗದತ್ತ ಸಂಚರಿಸಿ ದಕ್ಷಿಣ ಒಳನಾಡಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.