ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು. ಇದೀಗ ಒತ್ತಡಕ್ಕೆ ಮಣಿದ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಹೊರಡಿಸಿದೆ.
ಈ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿದ್ದು, ವೀರಶೈವ ಲಿಂಗಾಯತ ಸಮುದಾಯದ ಬಹು ದಿನಗಳ ಬೇಡಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಈಡೇರಿಸಿದ್ದಾರೆ. ಇದು ಸಂತಸದ ವಿಷಯ ಎಂದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ನಿನ್ನೆ ಹಲವು ಸಚಿವರು ಸಿಎಂ ಭೇಟಿಯಾಗಿ ಒತ್ತಡ ಹೇರಿದ್ದೆವು. ಇದೀಗ ಸಿಎಂ ಯಡಿಯೂರಪ್ಪ ನಿಗಮ ರಚನೆಗೆ ಆದೇಶ ಹೊರಡಿಸಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೂ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ಇದು ನಮ್ಮ ಹಲವು ವರ್ಷಗಳ ಬೇಡಿಕೆಯಾಗಿತ್ತು ಈಗ ಈಡೇರಿದೆ ಎಂದು ತಿಳಿಸಿದರು.