ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದ್ದು, ಇನ್ನು ಹಲವು ದಿನ ಕಾಯಲೇಬೇಕಾದ ಅನಿವಾರ್ಯ ಸ್ಥಿತಿಯಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಮತ್ತೊಮ್ಮೆ ಚರ್ಚೆ ನಡೆಸಲಿದ್ದು, ಅಲ್ಲದೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸುವವರೆಗೂ ಸಂಪುಟ ವಿಸ್ತರಣೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಕಡಿಮೆ. ಹೀಗಾಗಿ ನವೆಂಬರ್ ನಲ್ಲಿ ಸಂಪುಟ ವಿಸ್ತರಣೆ ಅನುಮಾನವಾಗಿದೆ.
ಅಲ್ಲದೇ ಡಿ.4 ಹಾಗೂ 5ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅರುಣ್ ಸಿಂಗ್ ಭಾಗಿಯಾಗುವ ಸಾಧ್ಯತೆಯಿದೆ. ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಅಂತಿಮ ಚರ್ಚೆ ನಡೆದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ನವೆಂಬರ್ ಬದಲಾಗಿ ಡಿಸೆಂಬರ್ ನಲ್ಲಿ ನಡೆಯಬಹುದು ಎಂಬ ಮಾತು ಬಿಜೆಪಿ ಉನ್ನತ ಮೂಲಗಳ ಮಾಹಿತಿ.