ಬೆಂಗಳೂರು: ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯವಾಗಿದೆ. ಕೆಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ನೌಕರರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿದೆ. ಬಸ್ ಸಂಚಾರವಿಲ್ಲದೇ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ. ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಿದ್ದು, ಬೇಡಿಕೆ ಈಡೇರದಿದ್ದರೆ ಮತ್ತೆ ಪ್ರತಿಭಟನೆ ನಡೆಸುವ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದರು.
8-9 ಸಚಿವರು ನನ್ನ ಮೇಲೆ ಮುಗಿಬಿದ್ದಿದ್ದಾರೆ. ನನ್ನ ಮನೆಗೆ ಮುತ್ತಿಗೆ ಹಾಕುವ ಕೆಲಸವೂ ನಡೆದಿದೆ. ಇಂತಹ ಯಾವುದೇ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಮೂರು ತಿಂಗಳಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟದ ಹಾದಿ ಹಿಡಿಯುತ್ತೇವೆ. ಅಲ್ಲದೇ ಸಾರಿಗೆ ನೌಕರರ ಮೊದಲ ಬೇಡಿಕೆಯಾದ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಒಪ್ಪಿಲ್ಲ. ಒಂದಲ್ಲ ಎರಡು ವರ್ಷವಾದರೂ ಸರಿ ಮೊದಲ ಬೇಡಿಕೆ ಈಡೇರಿಸಬೇಕು. ಸಧ್ಯಕ್ಕೆ ಮುಷ್ಕರ ಅಂತ್ಯವಾಗಿದ್ದು, ನಾಳೆಯಿಂದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಹೇಳಿದರು.