ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದ ಕಾರಣ ಆಗಸ್ಟ್ 11ರ ಮಧ್ಯರಾತ್ರಿವರೆಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.
ಭಾರಿ ಮಳೆಯಿಂದ ಗುಡ್ಡ ಕುಸಿದು ಅಲ್ಲಲ್ಲಿ ಮರ, ಕಲ್ಲುಬಂಡೆ, ಮಣ್ಣು ರಸ್ತೆಗೆ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು. ಮಳೆ ಕಡಿಮೆಯಾಗಿ ಭೂಕುಸಿತ ತೆರವುಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಪ್ರತಿದಿನ ಬೆಳಗ್ಗೆ 7ರಿಂದ ರಾತ್ರಿ 7 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಚಿಕ್ಕಮಗಳೂರು –ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಭಾರೀ ಮಳೆಯಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.