
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ನಿವೃತ್ತಿ, ಮರಣ ಅಥವಾ ಇತರೆ ಕಾರಣಗಳಿಂದ ತೆರವಾದ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನ ಬಿಡುಗಡೆಯಾಗಲು ತೊಡಕಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯ ನಿರ್ವಹಣೆ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದು, ನೇರ ಪಾವತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರ ನಿವೃತ್ತಿ, ಮರಣ ಮೊದಲಾದ ಕಾರಣಗಳಿಂದ ತೆರವಾದ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಹೇಳಿದ್ದಾರೆ.