ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಬೇರೆಯವರ ಮನೆಯಲ್ಲಿ ಮಾತ್ರ ಕಾವಲುಗಾರ. ತನ್ನ ಮನೆಯಲ್ಲಿ ಯಾರು ಏನು ಬೇಕಾದರೂ ತಿನ್ನಬಹುದು ಎಂದು ಭಾವಿಸಿರುವಂತಿದೆ.’
ಹೀಗೆಂದು ಕಾಂಗ್ರೆಸ್ ಪಕ್ಷದ ನಾಯಕ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ನಾಯಕರಿಗೆ ಮತ್ತು ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ಸಿಎಂ ಹುದ್ದೆಯಿಂದ ತೆಗೆದು ಹಾಕಬೇಕೆಂದು ಪತ್ರಿಕಾಗೋಷ್ಠಿಯಲ್ಲಿ ಅವರು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಯವರ ಮಗ, ಮೊಮ್ಮಗ ಮತ್ತು ಅಳಿಯನ ವಿರುದ್ಧ 662 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ ಎಂದು ಆರೋಪಿಸಿ, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ ಅಭಿಷೇಕ್ ಮನು ಸಿಂಘ್ವಿ, ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ದೂರಿದ್ದಾರೆ.
ಮುಖ್ಯಮಂತ್ರಿಯವರ ಪುತ್ರ ವಿಜಯೇಂದ್ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆದಾರರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಆರೋಪಿಸಿರುವುದನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಬೇರೆಯವರ ಮನೆಗಳಿಗೆ ಮಾತ್ರ ಕಾವಲುಗಾರನಾಗಿರುವುದು ದುರದೃಷ್ಟಕರ. ಅವರ ಮನೆಯಲ್ಲಿ ಭ್ರಷ್ಟಾಚಾರ ನಡೆಯಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.