ಬೆಂಗಳೂರು: ಅಕ್ಟೋಬರ್ 15 ರ ನಂತರ ಶಾಲೆಗಳನ್ನು ಪುನಾರಂಭಿಸಲು ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆದರೆ, ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಡಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭಿಸಬಾರದೆಂದು ಒತ್ತಾಯ ಕೇಳಿಬಂದಿದೆ. ಸರ್ಕಾರ ಕೂಡ ಸದ್ಯಕ್ಕೆ ಶಾಲೆಯನ್ನು ತೆರೆಯದಿರಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಶಾಲೆಗಳನ್ನು ಪುನಾರಂಭ ಮಾಡುವ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ಆರಂಭಿಸುವ ಕುರಿತು ತೀರ್ಮಾನಿಸಲಾಗುವುದು. ಮೊದಲು ಪೋಷಕರ ಒಪ್ಪಿಗೆ ಪಡೆಯಬೇಕಿದೆ. ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸಬೇಕಿದೆ. ಆದರೆ, ಸದ್ಯಕ್ಕಂತೂ ಶಾಲೆಗಳನ್ನು ಆರಂಭಿಸುವುದಿಲ್ಲ. ಶಾಲೆ ಆರಂಭಕ್ಕೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇವತ್ತು ನಡೆದ ಸಭೆಯಲ್ಲಿ ಈ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ. ಪೋಷಕರ ಅಭಿಪ್ರಾಯ, ತಜ್ಞರ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.