ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಮಾಸ್ಕ್ ಹಾಕದಿದ್ದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ಮೂರನೇ ಸಲ ತಪ್ಪು ಪುನರಾವರ್ತನೆಯಾದಲ್ಲಿ ಜೈಲಿಗೆ ಹಾಕಲಾಗುವುದು. ಅದೇ ರೀತಿ 100 ಕ್ಕಿಂತ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಿದ್ದು, ನಿಯಮ ಉಲ್ಲಂಘಿಸಿದರೆ ಚಿಂತನೆ ನಡೆಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ವಿಪರೀತ ಹೆಚ್ಚಳವಾಗುತ್ತಿದೆ. ಜನರ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆನ್ನಲಾಗಿದೆ. ಅನ್ಲಾಕ್ ನಂತರದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗಿದ್ದು, ಜನ ಕೊರೊನಾ ಹೊರಟು ಹೋಗಿದೆ ಎಂಬ ಭಾವನೆಯಿಂದ ಸಾಮಾಜಿಕ ಅಂತರ ಮರೆಯುತ್ತಿದ್ದಾರೆ.
ಮಾಸ್ಕ್ ಬಳಕೆ ಕಡಿಮೆಯಾಗಿದ್ದು ದೈಹಿಕ ಅಂತರ ಪಾಲಿಸುತ್ತಿಲ್ಲ. ಹೆಚ್ಚು ಕಾರ್ಯಕ್ರಮಗಳು ನಡೆಯುತ್ತಲೇ ಇವೆ. ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಈ ಕುರಿತಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯವೆಂದು ಅಧಿಕಾರಿಗಳು ಸಲಹೆ ನೀಡಿದ್ದು, ಈ ಬಗ್ಗೆ ಸಚಿವರು ಸಿಎಂ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.