ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಒದಗಿಸಿದ ಉಪಕರಣಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಯಷ್ಟು ಅವ್ಯವಹಾರ ನಡೆದಿದ್ದು ತನಿಖೆ ನಡೆಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಸುಮಾರು 3000 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಖರ್ಚು ಮಾಡಿದೆ. ಯಾವುದಕ್ಕೆ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕೆಂದು ಒತ್ತಾಯಿಸಿದ್ದಾರೆ.
ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಉಪಕರಣಗಳ ಖರೀದಿಯಲ್ಲಿ 2200 ಕೋಟಿ ರೂಪಾಯಿಯಷ್ಟು ಅವ್ಯವಹಾರವಾಗಿದ್ದು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಹಣ ನೀಡಿ ಉಪಕರಣ ಖರೀದಿ ಮಾಡಲಾಗಿದೆ ಎಂದು ಆರೋಪಿಸಿದ್ದು, ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕೊರೋನಾ ನಿರ್ವಹಣೆ ಖರ್ಚುವೆಚ್ಚ ಕುರಿತು ನಿಗಾ ವಹಿಸಲು ಸರ್ವ ಪಕ್ಷದ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಪರಿಸ್ಥಿತಿ ಕೈ ಮೀರಿದ್ದು, ಕೊರೋನಾ ಸೋಂಕು ಸಮುದಾಯಕ್ಕೆ ಹರಡಿದೆ. ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದರೂ ರಾಜ್ಯದಲ್ಲಿ ಅಮಾನವೀಯವಾಗಿ ಮೃತದೇಹಗಳನ್ನು ಎಸೆಯಲಾಗುತ್ತಿದೆ. ಇದು ಮನುಕುಲಕ್ಕೆ ತೋರಿದ ಅಗೌರವ ಎಂದು ಅಸಮಾಧಾನ ವ್ಯಕ್ತಪಡಿಸಿ, ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ನಾಲ್ವರ ಮೃತದೇಹಗಳನ್ನು ಗುಂಡಿಗೆ ಎಸೆಯಲಾಗಿದೆ. ಸರ್ಕಾರದ ನಿರ್ಲಕ್ಷದಿಂದ ಇದೆಲ್ಲಾ ಆಗಿದೆ ಎಂದು ಟೀಕಿಸಿದ್ದಾರೆ.