ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜುಲೈ 14 ರ ಮಂಗಳವಾರ ರಾತ್ರಿ 8 ಗಂಟೆಯಿಂದ 1 ವಾರಗಳ ಕಾಲ ಅಂದರೆ ಜುಲೈ 22 ರ ಬೆಳಿಗ್ಗೆ 5 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು.
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19 ರ ನಿಯಂತ್ರಣಕ್ಕೆ ಕೈ ಜೋಡಿಸಿ.
ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿ ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಸಹಕರಿಸುವಂತೆ ತಿಳಿಸಿದ್ದಾರೆ.