ಬೆಂಗಳೂರು: ಹಲವಾರು ಕಾರಣಗಳಿಂದ ಸ್ಥಗಿತಗೊಂಡಿದ್ದ ನಾಡಿನ 2934 ಕಲಾವಿದರ ಮಾಸಾಶನವನ್ನು 15 ದಿನದೊಳಗೆ ಇತ್ಯರ್ಥಪಡಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಪ್ರಾಧಿಕಾರಗಳ ಅಧ್ಯಕ್ಷರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, 2934 ಕಲಾವಿದರ ಮಾಸಾಶನ ಸ್ಥಗಿತಗೊಂಡಿದ್ದು, 15 ದಿನದೊಳಗೆ ಇದು ಇತ್ಯರ್ಥವಾಗಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದೆಂದು ಸೂಚಿಸಿದ್ದಾರೆ.
ಕೋವಿಡ್-19 ಪರಿಣಾಮದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕಲಾವಿದರಿಗೆ ಅಕಾಡೆಮಿಗಳ ವತಿಯಿಂದ 3.45 ಕೋಟಿ ಹಣವನ್ನು ಪಾವತಿ ಮಾಡಲಾಗಿದೆ. ತಕ್ಷಣವೇ ಸರ್ಕಾರದಿಂದ ಆಕಾಡಮಿಗಳಿಗೆ ಬಿಡುಗಡೆ ಮಾಡಲು ಸರ್ಕಾರದ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕೆಲವು ಅಕಾಡೆಮಿಗಳಲ್ಲಿ ಬಾಕಿ ಇರುವ ವಾರ್ಷಿಕ ಪ್ರಶಸ್ತಿಗಳನ್ನು ಅರ್ಹರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು, ಪುನಃ ಕಾರಣಗಳನ್ನು ನೀಡಬಾರದು. ಗಡಿ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ತುಳು, ಕೊಂಕಣಿ, ಬ್ಯಾರಿ ಹಾಗೂ ಕೊಡಗಿನ ಸಾಂಸ್ಕೃತಿಕ ಸಮುಚ್ಚಯ ಭವನ ನಿರ್ಮಾಣಕ್ಕೆ ಬಿಡುಗಡೆ ಮಾಡಿರುವ ಅನುದಾನ ಬಳಸಿ ನೆನೆಗುದಿಗೆ ಬಿದ್ದಿರುವ ಕಟ್ಟಡಗಳನ್ನು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು. ಶೀಘ್ರದಲ್ಲೇ ಇವುಗಳು ಕಾರ್ಯಾರಂಭ ಮಾಡುವಂತೆ ಹೇಳಿದ್ದಾರೆ.
ಕೋವಿಡ್ 19 ಪರಿಣಾಮ ಆರ್ಥಿಕ ಕುಸಿತ ಕಂಡಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಎಲ್ಲ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಪೂರ್ಣ ಪ್ರಮಾಣದ ಅನುದಾನವನ್ನು ಬಿಡುಗಡೆ ಮಾಡಲು ಸಾಧ್ಯವಾಗದಿದ್ದರೂ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚುಕಮ್ಮಿ ಸರಿಸಮಾನಗಿಯೇ ಅನುದಾನವನ್ನು ನೀಡಲಾಗಿದೆ. ಈ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕ್ರಿಯಾಶೀಲ ಚಟುವಟಿಕೆಗಳನ್ನು ನಡೆಸಬೇಕೆಂದು ಸಲಹೆ ನೀಡಿದ್ದಾರೆ.
ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ರಶ್ಮಿ, ನಿರ್ದೇಶಕ ರಂಗಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಇದ್ದರು.