ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ, ಕೊರೋನಾ ಭ್ರಷ್ಟಾಚಾರ ಹಾಗೂ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರಕ್ಕೆ ಮುಟ್ಟಿಸಲು ಇದೇ 20 ರಂದು ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಜನ ಧ್ವನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ 20ರಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನ. ಈ ಇಬ್ಬರು ನಾಯಕರು ಉಳುವವರಿಗೆ ಭೂಮಿ ಸಿಗುವ ಕಾನೂನು ತಂದುಕೊಟ್ಟವರು. ಜನರ ಕಲ್ಯಾಣಕ್ಕಾಗಿ ಭೂಸುಧಾರಣೆ ಕಾಯಿದೆ ಜಾರಿಗೆ ತಂದರು. ಆದರೆ ಇಂದಿನ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಬಹುದು ಎಂದು ಸುಗ್ರೀವಾಜ್ಞೆ ಹೊರಡಿಸಿದೆ ಎಂದು ದೂರಿದ್ದಾರೆ.
ರೈತರಿಂದ ಭೂಮಿ ಕಸಿದುಕೊಳ್ಳುವುದೂ ಒಂದೇ, ಈ ಕಾಯ್ದೆ ಜಾರಿಗೆ ತಂದಿರುವುದೂ ಒಂದೇ. ರೈತರ ಬಳಿ ಜಮೀನು ಕಬಳಿಸುವ ಪ್ರಯತ್ನ ನಡೆಯುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಪಕ್ಷ ತನ್ನ ನಿಲುವು ತಿಳಿಸಿದೆ. ಇದರ ಜತೆಗೆ ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳ ಮೂಲಕ ಜನ ವಿರೋಧಿ, ರೈತವಿರೋಧಿ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ಇದರ ಜತೆಗೆ ಕೊರೋನಾ ಉಪಕರಣ ಖರೀದಿಯಲ್ಲಿ ಎಸಗಿರುವ ಭ್ರಷ್ಟಾಚಾರ, ಅತಿವೃಷ್ಟಿ ನಿರ್ವಹಣೆಯಲ್ಲಿ ವೈಫಲ್ಯ ಖಂಡಿಸಿ, ಜನರ ಧ್ವನಿಯನ್ನು ಸರ್ಕಾರಕ್ಕೆ ಮುಟ್ಟಿಸಸಲು ‘ಜನ ಧ್ವನಿ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಅಂದು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಪಕ್ಷದಿಂದ ಧರಣಿ ನಡೆಸಲಾಗುವುದು. ನಂತರ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಮನವಿ ಪತ್ರ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್ ಶಂಕರ್, ಉಪಮುಖ್ಯಸ್ಥ ವಿ.ಆರ್. ಸುದರ್ಶನ್, ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಇದ್ದರು.