ಬೆಂಗಳೂರು: ಸರ್ಕಾರಿ ಗುತ್ತಿಗೆ ವೈದ್ಯರು, ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದು ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ.
ಈಗ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4968 ವೈದ್ಯರು ವೇತನ ಪರಿಷ್ಕರಣೆಗೆ ಒತ್ತಾಯಿಸಿದ್ದು, ಆಗಸ್ಟ್ 15 ರೊಳಗೆ ಬೇಡಿಕೆ ಈಡೇರಿಸದಿದ್ದರೆ ಹಂತಹಂತವಾಗಿ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮುಷ್ಕರ ಕೈಗೊಳ್ಳಲು ಮುಂದಾಗಿದ್ದು, ಬೇಡಿಕೆ ಈಡೇರಿಕೆಗೆ ಗಡುವು ನೀಡಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಆರೋಗ್ಯ ಇಲಾಖೆಯಡಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಬೇಡಿಕೆ ಈಡೇರಿಸಬೇಕೆಂದು ಕೋರಲಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಸೋಂಕಿತ ವೈದ್ಯರ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.