alex Certify ರಾಜ್ಯದ ರೈತರಿಗೆ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರೈತ ಮುಖಂಡರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದ ಸಿಎಂ, ಸರ್ಕಾರದ ಇತಿಮಿತಿಯಲ್ಲಿ ರೈತರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಾಗುವುದು ಮತ್ತು ಶೀಘ್ರದಲ್ಲೇ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್‌ ನಿಂದ ಲಾಕ್ ಡೌನ್ ಘೋಷಣೆಯಾದಾಗ ಕೃಷಿ ಮತ್ತು ಪೂರಕ ಚಟುವಟಿಕೆಗಳು ಯಾವುದೇ ಅಡಚಣೆ ಇಲ್ಲದೆ ಮುಂದುವರೆಸಲು ಅನುಮತಿ ನೀಡಲಾಗಿದೆ. ಮುಂಗಾರು ಹಂಗಾಮಿನ ಚಟುವಟಿಕೆಗಳು ಅವ್ಯಾಹತವಾಗಿ ನಡೆದಿದೆ. ಇದಲ್ಲದೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ ಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಸೇವಾ ಕೇಂದ್ರಗಳು, ಕೃಷಿ ಪರಿಕರ ಮಾರಾಟ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಹಿಂಗಾರು /ಬೇಸಿಗೆ ಹಂಗಾಮಿನ ಬೆಳೆಗಳ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಶೇ. 80 ರಷ್ಟು ಕಟಾವು ಪೂರ್ಣಗೊಂಡಿದೆ. ಇದಕ್ಕೆ ಬೇರೆ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಲು ಸಹ ವ್ಯವಸ್ಥೆ ಮಾಡಲಾಗಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸಲು ಅಗ್ರಿ ವಾರ್ ರೂಂ ಸ್ಥಾಪಿಸಲಾಗಿದೆ ಎಂದು ಹೇಳಿದ್ದು, ಈ ಬಗ್ಗೆ ರೈತ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ. ರಾಜ್ಯದಲ್ಲಿ ಬೆಳೆಯುವ ಹೂವು ಹಣ್ಣು ತರಕಾರಿಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲದೇ, ಹಾಪ್ ಕಾಮ್ಸ್ ಮೂಲಕ  ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ರೈತ ಉತ್ಪಾದನಾ ಸಂಸ್ಥೇಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ರಾಯಚೂರು, ಕೊಪ್ಪಳ, ಬಳ್ಳಾರಿ ಮೊದಲಾದ ಜಿಲ್ಲೆಗಳಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದ ನಾಶವಾಗಿರುವ ಭತ್ತದ ಬೆಳೆಗೆ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ. ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆಯಡಿ ವಿವಿಧ ಕಂತುಗಳಲ್ಲಿ 50.77 ಲಕ್ಷ ರೈತರಿಗೆ ಒಟ್ಟು 3755.16 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. 2020-21ನೇ ಸಾಲಿನಲ್ಲಿ 47.81 ಲಕ್ಷ ರೈತರಿಗೆ ಎರಡು ಸಾವಿರ ರೂಪಾಯಿಯಂತೆ ಒಟ್ಟು 956.32 ಕೋಟಿ ರೂ. ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈ ವರೆಗೆ 44.67 ಲಕ್ಷ ರೈತರಿಗೆ 893.95 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ. ಮೆಕ್ಕೆಜೋಳ ಖರೀದಿಗೆ ಕೆಎಂಎಫ್ ಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್. ಅಶೋಕ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ ಹಾಗೂ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಶಾಂತಕುಮಾರ್ ಮೊದಲಾದವರು ಭಾಗವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...