
ಬೆಂಗಳೂರಿನ ಕೆಜಿಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ನಡೆದ ಪೊಲೀಸ್ ಫೈರಿಂಗ್ ನಲ್ಲಿ ಮೂವರು ಮೃತಪಟ್ಟಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಬೆಂಗಳೂರಿನ ಡಿಜೆ ಹಳ್ಳಿಯ 20ವರ್ಷದ ವಾಜಿದ್, ಶಾಂಪುರ ಮುಖ್ಯ ರಸ್ತೆ ನಿವಾಸಿ ಯಾಸಿನ್ ಭಾಷಾ(22) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಡಿಜೆ ಹಳ್ಳಿ ಠಾಣೆ ವ್ಯಾಪ್ತಿಯ ಗಲ್ಲಿಗಲ್ಲಿಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆ ಮುಂದೆ ನಿಲ್ಲಿಸಲಾಗಿದ್ದ ಸಾರ್ವಜನಿಕ ವಾಹನಗಳು, ಕಾರ್, ಬೈಕ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ, ಕಚೇರಿ ಮೇಲೆ ದಾಳಿ ಮಾಡಿ ಪೀಠೋಪಕರಣಗಳಿಗೆ ಬೆಂಕಿ ಹಚ್ಚಲಾಗಿದೆ. ಶಾಸಕರ ಕಛೇರಿಯಲ್ಲಿನ ವಸ್ತುಗಳು ಸುಟ್ಟು ಕರಕಲಾಗಿವೆ.
ಮನೆಯ ಸಮೀಪವೇ ಶಾಸಕರ ಕಚೇರಿ ಇದ್ದು, ದಾಳಿ ಮಾಡಿದವರು ಶಾಸಕರ ಕಚೇರಿಗೆ ಅಳವಡಿಸಿದ್ದ ಬೋರ್ಡ್ ಕಿತ್ತೆಸೆದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಎರಡು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಗಲಭೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಲು ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.