ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಮತ್ತು ನೆರೆಹಾನಿಯಿಂದಾದ ನಷ್ಟದ ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಆಗಮಿಸಲಿದೆ.
ಕಂದಾಯ ಸಚಿವ ಆರ್. ಅಶೋಕ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ರಾಜ್ಯಕ್ಕೆ ಆಗಮಿಸಲಿದ್ದು, ಸೆಪ್ಟಂಬರ್ 7 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಹೇಳಿದ್ದಾರೆ.
ಸೆಪ್ಟಂಬರ್ 8 ರಂದು ವಿಜಯಪುರ, ಕೊಡಗು, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಲಿದೆ. ಸೆ. 9 ರಂದು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದು, 4800 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಮಾಡಲಾಗುವುದು. ಕೇಂದ್ರದ ಅಧಿಕಾರಿಗಳ ತಂಡ ಕಳುಹಿಸುವಂತೆ ರಾಜ್ಯದ ಮನವಿಗೆ ಸ್ಪಂದಿಸಿದ್ದು 395 ಕೋಟಿ ರೂ. ಮುಂಗಡವಾಗಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.