ಧಾರವಾಡ: ಕೋವಿಡ್ -19 ಸೋಂಕು ನಿಯಂತ್ರಿಸಲು ಈ ಬಾರಿ ಆಗಸ್ಟ್ 22 ರಂದು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶೋತ್ಸವ ಆಚರಿಸಲು ಕೇಂದ್ರ ಗೃಹ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನಗಳ ಅನುಸಾರವಾಗಿ ಧಾರವಾಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿರುವ ಮಾರ್ಗಸೂಚಿಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಿಸಿದ್ದಾರೆ.
ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳ ಒಳಗೆ ಅಥವಾ ಮನೆಗಳಲ್ಲಿ ಆಚರಿಸುವುದು. ಗಣೇಶ ಚತುರ್ಥಿ ಹಬ್ಬವನ್ನು ರಸ್ತೆ, ಗಲ್ಲಿ, ಓಣಿ, ಮೈದಾನ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.
ಯಾವುದೇ ಕಾರಣಕ್ಕೂ ನದಿ, ಕೆರೆ ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶಮೂರ್ತಿಗಳ ವಿಸರ್ಜನೆಗೆ ಅವಕಾಶವಿಲ್ಲ. ಗಣೇಶೋತ್ಸವದಲ್ಲಿ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಮನೆಯ ಆವರಣದಲ್ಲಿಯೇ ಬಕೆಟ್, ನೀರಿನ ಬ್ಯಾರಲ್ ಗಳಲ್ಲಿ ವಿಸರ್ಜನೆ ಮಾಡಬೇಕು.
ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನ ನಿತ್ಯ ಸ್ಯಾನಿಟೈಸೇಷನ್, ದರ್ಶನಕ್ಕೆ ಬರುವ ಭಕ್ತರು, ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ದರ್ಶನ ಸರದಿಯಲ್ಲಿ ಸಾರ್ವಜನಿಕ ಭಕ್ತಾದಿಗಳು ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವವನ್ನು ಸೌಹಾರ್ದ ರೀತಿಯಿಂದ ಆಚರಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಎಚ್ಚರ ವಹಿಸಬೇಕು.
ರಾಷ್ಟ್ರೀಯ ನಿರ್ದೇಶನಗಳನ್ನು ರಾಜ್ಯ ಸರ್ಕಾರ, ಹಾಗೂ ಜಿಲ್ಲಾಡಳಿತ ಹೊರಡಿಸುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.