ಶಿವಮೊಗ್ಗ: ರಾಜ್ಯದ 6022 ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಸೋಲಾರ್ ಮೂಲಕ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಡಿ.27 ರಂದು 2ನೇ ಹಂತದ ಮತದಾನ ನಡೆಯಲಿದ್ದು, 30 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದರು.
ಗ್ರಾಮ ಪಂಚಾಯಿತಿಗಳ ಮೂಲಕ ಅಧಿಕಾರ ವಿಕೇಂದ್ರೀಕರಣವಾಗಬೇಕೆಂಬ ಮಹಾತ್ಮಾಗಾಂಧೀಜಿ, ಅಟಲ್ ಬಿಹಾರಿ ವಾಜಪೇಯಿ, ನರೇಂದ್ರ ಮೋದಿಯವರ ಆಶಯದಂತೆ ಗ್ರಾಮಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಹೊಸ ಚುನಾಯಿತ ಸದಸ್ಯರು ಬಂದ ನಂತರ ಗ್ರಾಮ ಪಂಚಾಯಿತಿ ಅನುದಾನ ತೆರಿಗೆ ಮೂಲಕ ಸಂಗ್ರಹವಾಗುವ ಹಣ ಬಳಸಿಕೊಂಡು ಮೂಲಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
6022 ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುವುದು. ಉತ್ತಮ ಗುಣಮಟ್ಟದ ವಸ್ತುಗಳನ್ನು ಬಳಸಿ ವಿದ್ಯುತ್ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುವುದು. ಪ್ರತಿ ಕಟ್ಟಡಗಳಿಗೆ ಸೋಲಾರ್ ವಿದ್ಯುತ್ ವ್ಯವಸ್ಥೆ ಲಭ್ಯವಾಗುವುದರಿಂದ ಬಡವರು, ರೈತರು, ಸಾರ್ವಜನಿಕರು ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ದಾಖಲೆಗಳನ್ನು ಪಡೆಯಬಹುದು. ವಿದ್ಯುತ್ ಇಲ್ಲವೆನ್ನುವ ಸಮಸ್ಯೆ ಬಗೆಹರಿಯಲಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರ ಸ್ವಚ್ಚ ಭಾರತ್ ಯೋಜನೆಯಡಿ ಗ್ರಾ.ಪಂ.ಗಳಿಗೆ 20 ಲಕ್ಷ ರೂ. ಅನುದಾನ ನೀಡುತ್ತಿದೆ. ಸಣ್ಣ ಮತ್ತು ದೊಡ್ಡ ಪಂಚಾಯಿತಿಗಳು ಇರುವುದರಿಂದ ಪ್ರತಿ ವ್ಯಕ್ತಿಗೆ ಇಷ್ಟು ಹಣ ಎಂದು ನಿಗದಿ ಮಾಡಿ ಇಡೀ ಗ್ರಾಮವನ್ನು ಸ್ವಚ್ಚವಾಗಿಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮಹಾತ್ಮಾಗಾಂಧಿ ಗ್ರಾಮೀಣ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 249 ರೂ. ಇದ್ದ ಕೂಲಿಯನ್ನು 275 ರೂ.ಗೆ ಹೆಚ್ಚಳ ಮಾಡಲಾಗಿದೆ. 100 ಮಾನವ ದಿನಗಳ ಕೆಲಸವನ್ನು 150 ದಿನಗಳಿಗೆ ಹೆಚ್ಚಿಸಲಾಗಿದ್ದು, ಇದಕ್ಕಾಗಿ ಹೆಚ್ಚುವರಿಯಾಗಿ 800ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಚುನಾವಣೆ ನಂತರ ಹೊಸ ಸದಸ್ಯರು ಗ್ರಾಮಗಳಲ್ಲಿ ಮೂಲ ಸೌಕರ್ಯ ಸೇರಿ ಹಲವು ಯೋಜನೆ ಜಾರಿಗೊಳಿಸಲಿದ್ದಾರೆ ಎಂದು ಹೇಳಿದರು.