ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಅಕ್ಟೋಬರ್, ನವೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಆಯೋಗ ಅಗತ್ಯವಾದ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ.
ಇನ್ನು ಗುರುವಾರ ಹೈಕೋರ್ಟ್ ನಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮೊದಲಾದವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆದಿದ್ದು, ಚುನಾವಣೆಗಾಗಿ ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ಶೀಘ್ರವೇ ವೇಳಾಪಟ್ಟಿ ಪ್ರಕಟಿಸಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ.
ಹೈಕೋರ್ಟ್ ಮುಖ್ಯ ನ್ಯಾ. ಎ.ಎಸ್. ಓಕ್, ನ್ಯಾ. ಅಶೋಕ್ ಎಸ್. ಕಿಣಗಿ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಆಯೋಗದ ಪರ ವಕೀಲರಾದ ಕೆ.ಎಸ್. ಫಣೀಂದ್ರ ಲಿಖಿತ ವಿವರ ನೀಡಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಅಗತ್ಯ ಮಾರ್ಗಸೂಚಿಗಳೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿಚಾರಣೆಯನ್ನು ಅ. 9 ಕ್ಕೆ ಮುಂದೂಡಿದ ನ್ಯಾಯಪೀಠ, ಚುನಾವಣೆಗೆ ಅಗತ್ಯವಾದ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.