ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಜಮೀನುಗಳು ನೀರಿನಿಂದ ಆವೃತವಾಗಿವೆ. ನದಿ, ಹೊಳೆ ಅಪಾಯ ಮಟ್ಟ ಮೀರಿವೆ. ಹಳ್ಳ,ಕೊಳ್ಳ, ಕೆರೆ,ಕಟ್ಟೆಗಳು ಭರ್ತಿಯಾಗಿ ಉಕ್ಕಿಹರಿಯತೊಡಗಿವೆ. ಅನೇಕ ಪಟ್ಟಣ, ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಜನ ತತ್ತರಿಸಿಹೋಗಿದ್ದಾರೆ. ಮನೆಗಳಿಗೂ ಹಾನಿಯಾಗಿ ಹಲವೆಡೆ ಮನೆ ಕುಸಿದಿವೆ.
ಕಲ್ಬುರ್ಗಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಭಾರಿ ಹಾನಿಯಾಗಿದೆ. ಧಾರಾಕಾರ ಮಳೆ ಮುಂದುವರೆದಿದ್ದು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ರಾಜ್ಯದ ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.