ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗವ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಆಘಾತ ತಂದಿದೆ.
ಕಲ್ಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ನೆರೆಹಾವಳಿಯಿಂದ ಭಾರಿ ನಷ್ಟ ಉಂಟಾಗಿದೆ. ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿರುವ ಸಂತ್ರಸ್ತರು, ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಇದೇ ವೇಳೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.