ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲಾ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಲೈಸೆನ್ಸ್ ರದ್ದು ಮಾಡಲಾಗುವುದು. ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ನಿಯಮದ ಪ್ರಕಾರ, ನಾಲ್ಕು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ದ್ವಿಚಕ್ರವಾಹನದಲ್ಲಿ ಸಂಚರಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕಿದೆ. ಹೆಲ್ಮೆಟ್ ಹಾಕದ ಚಾಲಕನಿಗೆ ದಂಡ ವಿಧಿಸುವ ಜೊತೆಗೆ ಚಾಲನಾ ಪರವಾನಿಗೆಯನ್ನು ಮೂರು ತಿಂಗಳ ಕಾಲ ಅಮಾನತುಗೊಳಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆಯ ಅನ್ವಯ ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಮೋಟಾರು ವಾಹನ ನಿಯಮದ ಅನ್ವಯ ರಾಜ್ಯದಲ್ಲಿ ಎಲ್ಲಾ ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕಿದೆ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಗಿದೆ.