ಬೆಂಗಳೂರು: ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 8 ರಂದು ಅಧಿಸೂಚನೆ ಹೊರಡಿಸಿ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ನಿಗದಿಪಡಿಸಲಾಗಿತ್ತು. ಈ ಮೀಸಲಾತಿ ವಿರುದ್ಧ ಅರ್ಜಿ ಸಲ್ಲಿಕೆಯಾಗಿದ್ದು ಹೈಕೋರ್ಟ್ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತ್ತು.
ಇಂದು ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದ್ದು ನವೆಂಬರ್ 10 ರೊಳಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಲು ಆದೇಶಿಸಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪುರಸಭೆ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕಸದಸ್ಯ ಪೀಠ ತಡೆಯಾಜ್ಞೆ ತೆರವು ಗೊಳಿಸಿ ನವೆಂಬರ್ 10ರೊಳಗೆ ಚುನಾವಣೆ ನಡೆಸಲು ಆದೇಶಿಸಿದೆ.